ಕುಂದಾಪುರ: ಕಾರು ಢಿಕ್ಕಿ: ಸ್ಕೂಟರ್ ಸವಾರ ಸಾವು
ಕುಂದಾಪುರ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಸ್ಕೂಟರ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ.
ಕುಂದಾಪುರ ನಗರದ ಭಂಡಾರ್‌ಕಾರ್ಸ್ ರಸ್ತೆ ನಿವಾಸಿ ಅಜಿತ್ ಪೌಲ್ ಲೂಯಿಸ್ (55) ಮೃತಪಟ್ಟ ದುರ್ದೈವಿ.
ಮೃತ ಅಜಿತ್ ಪೌಲ್ ಲೂಯಿಸ್ ಅವರು ನವದೆಹಲಿಯ ಖಾಸಗಿ ಕಂಪೆನಿಯೊಂದರಲ್ಲಿ ಜನರಲ್ ಮ್ಯಾನೇಜರ್ (GM) ಆಗಿ ಉದ್ಯೋಗದಲ್ಲಿದ್ದರು. ಕೆಲಸದ ನಿಮಿತ್ತ ದೆಹಲಿಯಲ್ಲಿದ್ದ ಅವರು ಇತ್ತೀಚೆಗೆ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ 8-10 ದಿನಗಳ ಹಿಂದಷ್ಟೇ ಊರಿಗೆ ಬಂದಿದ್ದರು. ಸೋಮವಾರದಂದು ಮುಳ್ಳಿಕಟ್ಟೆ ಸಮೀಪದ ಶಿಕ್ಷಣ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ತಮ್ಮ ಪುತ್ರಿಯ ಶೈಕ್ಷಣಿಕ ಪ್ರಗತಿಯನ್ನು ವಿಚಾರಿಸಲು ಶಾಲೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಜಿತ್ ಅವರನ್ನು ತಕ್ಷಣವೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ತೀವ್ರ ರಕ್ತಸ್ರಾವ ಹಾಗೂ ಪೆಟ್ಟಿನಿಂದಾಗಿ ಅವರು ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ದೃಢಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






