ಪುತ್ತೂರು: ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಮಾಡಿ ₹1.31 ಕೋಟಿ ವಂಚನೆ: ಪ್ರಕರಣ ದಾಖಲು
ಪುತ್ತೂರು: ಮುಂಬೈ ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಗಳು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ₹1.31 ಕೋಟಿ ವಂಚಿಸಿರುವ ಘಟನೆ ನಡೆದಿದೆ.
ಆರೋಪಿಗಳು ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಬಂಧನದ ಭೀತಿ ಹುಟ್ಟಿಸಿದ್ದಾರೆ. ಬಳಿಕ ವಾಟ್ಸಾಪ್ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿ, ಬ್ಯಾಂಕ್ ಖಾತೆಗಳ ಪರಿಶೀಲನೆ ಹಾಗೂ ಹಣದ ದೃಢೀಕರಣದ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಇದನ್ನು ನಂಬಿದ ದೂರುದಾರರು 2026ರ ಸೆಪ್ಟೆಂಬರ್ 2ರಿಂದ ಅಕ್ಟೋಬರ್ 6ರವರೆಗೆ ಹಂತ ಹಂತವಾಗಿ ಒಟ್ಟು ₹1,31,50,000 ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ.
ನಂತರ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ದೂರುದಾರರು ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ.
ಈ ಸಂಬಂಧ ದಕ್ಷಿಣ ಕನ್ನಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಟಿ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.






