ಸ್ಟಿಂಗ್ ಆಪರೇಷನ್ ವೀಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು: ಸ್ಟಿಂಗ್ ಆಪರೇಷನ್ ವೀಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿದ್ದರಾಮಯ್ಯ, ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ.
ಈ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲದೆ ಇದ್ದರೂ ಇದನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ನನ್ನ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಹೆಸರಿನ ಉಲ್ಲೇಖ ಇರುವ ಈ ಸ್ಟಿಂಗ್ ಆಪರೇಷನ್ ವಿಡಿಯೋ ಅನ್ನು ಯಾವುದೇ ಪತ್ರಿಕೆ, ಚಾನೆಲ್ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಇಲ್ಲವೇ ಪ್ರಸಾರ ಮಾಡದಂತೆ ತಡೆ ನೀಡಬೇಕು ಎಂದು ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ.






