ಮಡಿಕೇರಿ: ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ಮಗು ಸೇರಿ ಒಂದೇ ಕುಟುಂಬದ ಮೂವರು ಮೃತ್ಯು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಪರಿಣಾಮ ನಾಲ್ಕು ವರ್ಷದ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತಾ (34) ಹಾಗೂ ನಾಲ್ಕು ವರ್ಷದ ಮಗಳು ಲಿಯಾ ಎಂದು ಗುರುತಿಸಲಾಗಿದೆ.
ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ಈ ಕುಟುಂಬವು ಸೋಮವಾರ ರಾತ್ರಿ ಸಿದ್ದಾಪುರದಿಂದ ಬಾಣಂಗಾಲ ಗ್ರಾಮದ ತಮ್ಮ ಮನೆಗೆ ಸ್ಯಾಂಟ್ರೋ ಕಾರಿನಲ್ಲಿ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಿದ್ದ ಕೆರೆಗೆ ಉರುಳಿ ಬಿದ್ದಿದೆ.
ಕಾರು ಸಂಪೂರ್ಣವಾಗಿ ನೀರಿನೊಳಗೆ ಮುಳುಗಿದ್ದರಿಂದ ಒಳಗೆ ಸಿಲುಕಿದ ಮೂವರಿಗೂ ಹೊರಬರಲು ಸಾಧ್ಯವಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗಿನ ಜಾವ ತೋಟದ ಕಾರ್ಮಿಕರು ಕೆರೆಯಲ್ಲಿ ಕಾರು ಬಿದ್ದಿರುವುದನ್ನು ಗಮನಿಸಿ ಪೊಲೀಸರಿಗೆ ಹಾಗೂ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಿದ್ದಾಪುರ ಪೊಲೀಸರು, ಸ್ಥಳೀಯರ ಸಹಾಯದಿಂದ ಕಾರನ್ನು ಹಾಗೂ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಕಾರು ಕೆರೆಗೆ ಉರುಳಲು ನಿಖರವಾದ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




