ವಿಮಾನ ನಿಲ್ದಾಣದಲ್ಲಿ 9.67 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ: ಇಬ್ಬರ ಬಂಧನ
ಬೆಂಗಳೂರು: ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9.67 ಕೋಟಿ ರೂ. ಮೌಲ್ಯದ 27 ಕೆಜಿಗೂ ಹೆಚ್ಚು ಹೈಡ್ರೋಪೋನಿಕ್ ಗಾಂಜಾವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಬ್ಯಾಂಕಾಕ್‌ನಿಂದ ಪ್ರತ್ಯೇಕ ವಿಮಾನಗಳಲ್ಲಿ ಬಂದಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ.
ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಎರಡು ಪ್ರತ್ಯೇಕ ವಿಮಾನಗಳಲ್ಲಿ ಕೆಐಎಬಿಗೆ ಬಂದಿಳಿದ ಇಬ್ಬರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ತಪಾಸಣೆ ನಡೆಸಿದಾಗ ಅಕ್ರಮವಾಗಿ ಅಡಗಿಸಿಡಲಾಗಿದ್ದ ಒಟ್ಟು 27 ಕೆಜಿ 600 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಂಡ ಗಾಂಜಾದ ಒಟ್ಟು ಮೌಲ್ಯ ಅಂದಾಜು 9.27 ಕೋಟಿ ರೂ.ನಿಂದ 9.67 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಬ್ಯಾಂಕಾಕ್‌ನಿಂದ ಬಂದ ಮೊದಲ ಪ್ರಯಾಣಿಕನ ಲಗೇಜ್ ಬ್ಯಾಗ್‌ನಿಂದ 5.43 ಕೋಟಿ ಮೌಲ್ಯದ 15.5 ಕೆಜಿ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ವಿಮಾನದಲ್ಲಿ ಬಂದಿದ್ದ ಎರಡನೇ ಪ್ರಯಾಣಿಕನ ಬಳಿಯಿಂದ 4.24 ಕೋಟಿ ಮೌಲ್ಯದ 12.1 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ವಿದೇಶದಿಂದ ಅಕ್ರಮವಾಗಿ ಮಾದಕ ದ್ರವ್ಯ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಇಲಾಖೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.




