ಬಿಲ್ ಕಟ್ಟಿಲ್ಲವೆಂದು ಮೃತದೇಹ ತಡೆಹಿಡಿಯುವಂತಿಲ್ಲ: ಖಾಸಗಿ ಆಸ್ಪತ್ರೆಗಳಿಗೆ ಹೊಸ ಸೂಚನೆ
ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಹೆಸರಿನಲ್ಲಿ ರೋಗಿಗಳಿಂದ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಆಸ್ಪತ್ರೆಗಳ ಚಿಕಿತ್ಸಾ ದರ ಮತ್ತು ಔಷಧಗಳ ಬೆಲೆಯಲ್ಲಿ ಪಾರದರ್ಶಕತೆ ತರಲು ಆರೋಗ್ಯ ಇಲಾಖೆ ಹಲವು ಕ್ರಮಗಳ ಕುರಿತು ಚರ್ಚೆ ನಡೆಸಿದೆ. ಆಸ್ಪತ್ರೆಯ ಬಾಕಿ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಮೃತದೇಹ ಹಸ್ತಾಂತರಿಸದೆ ತಡೆಹಿಡಿಯುವಂತಹ ಪ್ರಕರಣಗಳಿಗೂ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಿದೆ.
ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಚಿಕಿತ್ಸಾ ವೆಚ್ಚ ಕಡಿತ, ಔಷಧಗಳ ದರ, ಆರೋಗ್ಯ ವಿಮೆ ಹಾಗೂ ಆಸ್ಪತ್ರೆಗಳ ನಿಯಮಗಳಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ. ರೋಗಿಗಳಿಗೆ ಅನಗತ್ಯ ಆರ್ಥಿಕ ಹೊರೆ ಬೀಳದಂತೆ ವ್ಯವಸ್ಥೆ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ಚಿಕಿತ್ಸೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಮತ್ತು ಔಷಧಗಳ ಬೆಲೆ ಎಷ್ಟಿದೆ ಎಂಬ ಮಾಹಿತಿ ರೋಗಿಗಳಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿಯ ಜೊತೆಗೆ ಔಷಧಗಳ ದರಪಟ್ಟಿಯನ್ನೂ ಪ್ರದರ್ಶಿಸುವಂತೆ ಸೂಚಿಸಲಾಗಿದೆ.



