October 26, 2026

ಬೆಳ್ತಂಗಡಿ: ಯುವತಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

cbc2a557-dd9d-4015-bcbf-6cdc05b13f55

ವೇಣೂರು: ಸಾರ್ವಜನಿಕ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಯುವತಿಯ ಬಳಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವೃದ್ಧನನ್ನು ವೇಣೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ವಶಕ್ಕೆ ಪಡೆಯಲಾದ ಆರೋಪಿ. ಸಂತ್ರಸ್ತ ಯುವತಿಯು ಅಕ್ಟೋಬರ್ 24, 2026ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸೈಯ್ಯದ್ ಮಹಮ್ಮದ್ ಇಸಾಕ್, ಸಾರ್ವಜನಿಕ ಸ್ಥಳದಲ್ಲೇ ಯುವತಿಯೊಂದಿಗೆ ಅತ್ಯಂತ ಅಸಭ್ಯವಾಗಿ ಮಾತನಾಡಿದ್ದಾನೆ. ಅಷ್ಟೇ ಅಲ್ಲದೆ, ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಂತ್ರಸ್ತ ಯುವತಿ ನೀಡಿದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 25ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿದೆ.

ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS 2023)ಯ ಸೆಕ್ಷನ್ 75(1)(ii), 75(1)(iv) (ಲೈಂಗಿಕ ಕಿರುಕುಳ), ಸೆಕ್ಷನ್ 79 (ಮಹಿಳೆಯ ಘನತೆಗೆ ಧಕ್ಕೆ ತರುವುದು) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015ರ ಸೆಕ್ಷನ್ 3(1)(r), 3(1)(w)(ii) ಮತ್ತು 3(2)(va) ಅಡಿಯಲ್ಲಿ (ಅಪರಾಧ ಕ್ರಮಾಂಕ 73/2026) ಗಂಭೀರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸದ್ರಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!