ಬಂಟ್ವಾಳ: ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು
ಬಂಟ್ವಾಳ: ಮನೆಯ ಹಾಲ್‌ನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಿಟಕಿಯ ಹಗ್ಗ ಕುತ್ತಿಗೆಗೆ ಸಿಲುಕಿ 9 ವರ್ಷದ ಬಾಲಕನೊಬ್ಬ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದ ಕೆಂತಲೆ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.
ಕೆಂತಲೆ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ನತದೃಷ್ಟ ಬಾಲಕ. ಅಕ್ಟೋಬರ್ 25ರ ರಾತ್ರಿ ಬಾಲಕ ಅಮೃತ್ ಮನೆಯ ಎದುರಿನ ಹಾಲ್‌ನಲ್ಲಿ ಒಬ್ಬನೇ ಆಟವಾಡುತ್ತಿದ್ದನು.
ಈ ವೇಳೆ ಆಕಸ್ಮಿಕವಾಗಿ ಮನೆಯ ಕಿಟಕಿಗೆ ಕಟ್ಟಲಾಗಿದ್ದ ಹಗ್ಗವು ಆತನ ಕುತ್ತಿಗೆಗೆ ಬಿಗಿದುಕೊಂಡು ಉಸಿರುಗಟ್ಟಿದೆ. ಬಾಲಕ ಸದ್ದಿಲ್ಲದೆ ಹಗ್ಗದಲ್ಲಿ ಸಿಲುಕಿ ಒದ್ದಾಡುತ್ತಿದ್ದುದನ್ನು ಕಂಡ ಆತನ ಸಹೋದರಿ ಪ್ರಾರ್ಥನಾ, ತಕ್ಷಣವೇ ಪಕ್ಕದಲ್ಲಿದ್ದ ಚಿಕ್ಕಪ್ಪನ ಮನೆಗೆ ಓಡಿಹೋಗಿ ವಿಷಯ ತಿಳಿಸಿದ್ದಾಳೆ.
ಕೂಡಲೇ ಬಾಲಕನನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಬಾಲಕ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಕರುಣಾಜನಕ ದುರಂತಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆಟವಾಡುವ ವಯಸ್ಸಿನ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.




