ಭೀಕರ ರಸ್ತೆ ಅಪಘಾತ: ನವದಂಪತಿ ಮೃತ್ಯು
ಚಿಕ್ಕಬಳ್ಳಾಪುರ: ಮದುವೆಯಾಗಿ ಕೆಲವೇ ತಿಂಗಳು ಕಳೆದಿತ್ತು. ನೂರಾರು ಕನಸುಗಳೊಂದಿಗೆ ಹೊಸ ಜೀವನ ಆರಂಭಿಸಿದ್ದ ನವದಂಪತಿಯ ಬದುಕಿಗೆ ಭೀಕರ ರಸ್ತೆ ಅಪಘಾತವೊಂದು ಅಂತ್ಯ ಹಾಡಿದೆ.
ಇಕೋ ಕಾರು ಹಾಗೂ ಎಲೆಕ್ಟ್ರಿಕ್ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ – ಬೆಂಗಳೂರು ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಚಿಂತಾಮಣಿ ನಗರದ ಎಂ.ಜಿ. ರಸ್ತೆಯ ಶ್ರೀನಿವಾಸ್ ಜ್ಯುವೆಲ್ಸ್ ಬಳಿಯ ನಿವಾಸಿಗಳಾದ ಷನ್ಮುಖ (27) ಹಾಗೂ ಅವರ ಪತ್ನಿ ಮಿಥುಲ (24) ಎಂದು ಗುರುತಿಸಲಾಗಿದೆ.
ಕೆಲವೇ ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಇದೀಗ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವುದು ಕುಟುಂಬಸ್ಥರಿಗೆ ಆಘಾತ ತಂದಿದೆ.
ಚಿಂತಾಮಣಿ-ಬೆಂಗಳೂರು ರಸ್ತೆಯಲ್ಲಿ ನವದಂಪತಿ ಎಲೆಕ್ಟ್ರಿಕ್ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಇಕೋ ಕಾರು ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬೈಕ್ ಎರಡೂ ತೀವ್ರವಾಗಿ ಜಖಂಗೊಂಡಿವೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಷನ್ಮುಖ ಹಾಗೂ ಮಿಥುಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.




