November 5, 2026

ಉಡುಪಿ ಪ್ರದೀಪ್ ಪೂಜಾರಿ ಪ್ರಕರಣ; ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ

b414062f-ae38-4110-b292-82cfba8292d4

ಉಡುಪಿ: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮಧ್ಯಪ್ರದೇಶದಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ.

ಹೊರರಾಜ್ಯದಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರೂ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಇಲ್ಲಿಗೆ ತಲುಪಿದ ತಕ್ಷಣ ತೀವ್ರ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ. ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ, ಆತನ ಸಾವಿಗೆ ಪ್ರಚೋದನೆ ಹಾಗೂ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪೆರ್ಡೂರಿನ ದಿಲೀಪ್ ಕುಮಾರ್ ಅವರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಹೊರರಾಜ್ಯದ ಇಬ್ಬರು ಕಾರ್ಮಿಕರು ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ BNS 2023 ರ ಸೂಕ್ತ ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಹೊರರಾಜ್ಯದ ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ಪಡೆ ರಚಿಸಲಾಗಿತ್ತು. ಮಧ್ಯಪ್ರದೇಶದಲ್ಲಿ ಆರೋಪಿಗಳು ಇರುವ ಕುರಿತು ಕಾಂಕ್ರೀಟ್ ಮಾಹಿತಿ ಆಧರಿಸಿ ದಾಳಿ ನಡೆಸಿದ ಉಡುಪಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಉಡುಪಿಗೆ ಕರೆತಂದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ, ತನಿಖೆಯ ಮುಂದಿನ ಹಂತವಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

error: Content is protected !!