ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ- ಬಂಧಿತರ ಸಂಖ್ಯೆ ನಾಲ್ಕಕ್ಕೇರಿಕೆ
ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಹೆಬ್ರಿ ತಾಲೂಕಿನ ವರಂಗ ಗ್ರಾಮದ ಆದರ್ಶ್ ಕಾಂಚನ್ ಹಾಗೂ ಕಾರ್ಕಳ ತಾಲೂಕಿನ ವರಂಗ ಗ್ರಾಮದ ದಿನೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಇದಕ್ಕೂ ಮೊದಲು ಮಧ್ಯಪ್ರದೇಶದ ಪವನ್ ಕುಮಾರ್ (24) ಹಾಗೂ ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಓರ್ವ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಉಡುಪಿ ಉಪವಿಭಾಗದ ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ಹಾಗೂ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ಬ್ರಹ್ಮಾವರ ವೃತ್ತ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಲಭ್ಯವಾದ ಸುಳಿವುಗಳ ಆಧಾರದಲ್ಲಿ ನವೆಂಬರ್ 3ರಂದು ಪೊಲೀಸ್ ತಂಡ ಮಧ್ಯಪ್ರದೇಶಕ್ಕೆ ತೆರಳಿತ್ತು. ಭೋಪಾಲ್ ರೈಲು ನಿಲ್ದಾಣದ ಸಮೀಪ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನಿವಾಸಿ ಪವನ್ ಕುಮಾರ್ ಹಾಗೂ ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಿತ್ತು.
ನವೆಂಬರ್ 5ರಂದು ಪವನ್ ಕುಮಾರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಪ್ರಾಪ್ತ ಬಾಲಕನನ್ನು ಸುರಕ್ಷತಾ ದೃಷ್ಟಿಯಿಂದ ವೀಕ್ಷಣಾ ಗೃಹದಲ್ಲಿ ಇರಿಸಲಾಗಿದೆ. ಪ್ರಕರಣದ ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದ ಪೊಲೀಸರು, ನವೆಂಬರ್ 7ರ ರಾತ್ರಿ ಕಾರ್ಕಳದಲ್ಲಿ ಆದರ್ಶ್ ಕಾಂಚನ್ ಮತ್ತು ದಿನೇಶ್ ಶೆಟ್ಟಿ ಅವರನ್ನು ಬಂಧಿಸಿದ್ದಾರೆ.
ಹಿರಿಯಡ್ಕ ಪೊಲೀಸ್ ಠಾಣೆಯ ಪ್ರಭಾರಿ ಸಬ್ ಇನ್‌ಸ್ಪೆಕ್ಟರ್ ಮುಕ್ತಾಬಾಯಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಇಬ್ಬರು ಆರೋಪಿಗಳನ್ನು ಪ್ರಕರಣದ ತನಿಖಾಧಿಕಾರಿ ಹಾಗೂ ಉಡುಪಿ ನಗರ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಹಿಂದಿನ ಸಂಪೂರ್ಣ ಸತ್ಯಾಸತ್ಯತೆ ಪತ್ತೆಹಚ್ಚಲು ಮುಂದಾಗಿದ್ದಾರೆ.




