ವಿಟ್ಲ: ಬೈರಿಕಟ್ಟೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ: ಲಾರಿ ವಶಕ್ಕೆ, ಪ್ರಕರಣ ದಾಖಲು
ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ಯಾವುದೇ ಪರವಾನಿಗೆ ಹಾಗೂ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಘನಲಾರಿಯೊಂದನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಾರ್ವಜನಿಕ ರಸ್ತೆಯಲ್ಲಿ ಘನಲಾರಿಯೊಂದು ದುರಸ್ತಿಗೀಡಾಗಿ ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ KA-21-C-4608 ನೋಂದಣಿ ಸಂಖ್ಯೆಯ ಘನಲಾರಿ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ.
ಲಾರಿಯ ಚಾಲಕ, ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಇರ್ಫಾನ್ ಪಾಷಾ (40) ಅವರನ್ನು ವಿಚಾರಿಸಿದಾಗ ಲಾರಿ ದುರಸ್ತಿಗೀಡಾಗಿರುವುದಾಗಿ ತಿಳಿಸಿದ್ದಾರೆ. ಬಳಿಕ ಲಾರಿಯಲ್ಲಿದ್ದ ಮಣ್ಣಿನ ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 229/2026ರಂತೆ BNS 2023ರ ಕಲಂ 303(2) ಹಾಗೂ MMDR ಕಾಯ್ದೆ ಮತ್ತು ಕರ್ನಾಟಕ ಅಲ್ಪ ಖನಿಜ ರಿಯಾಯಿತಿ ನಿಯಮಗಳ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




