November 13, 2026

ಬೆಳ್ತಂಗಡಿ: ಸರಣಿ ಅಪಘಾತ: ಇಬ್ಬರು ಬೈಕ್ ಸವಾರರು ಸಾವು

0
image_editor_output_image-1018646719-1794539478169

ಬೆಳ್ತಂಗಡಿ: ಬೆಳ್ತಂಗಡಿಯ ಚರ್ಚ್ ರೋಡ್‌ನಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಮೃತರನ್ನು ನಾವೂರು ನಿವಾಸಿ ಸಂತೋಷ್ (43) ಮತ್ತು ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ ಕುಮಾರ್ (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಪುನೀತ್ ಎಂಬಾತ ಚಲಾಯಿಸುತ್ತಿದ್ದ ಗೂಡ್ಸ್ ಟೆಂಪೋ, ಗುರುವಾಯನಕೆರೆ ಕಡೆಗೆ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದಲ್ಲಿ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ.

ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸಂತೋಷ್ ಅವರು ತಂದೆ-ತಾಯಿ, ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಬೆಳ್ತಂಗಡಿಯಲ್ಲಿ ‘ಯೋಗದೀಪ್ ಪ್ರಿಂಟರ್ಸ್’ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದ ಮೋಹನ್ ಕುಮಾರ್ ಅವರು ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಈ ಸಂಬಂಧ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!