November 13, 2026

ಹೆಜಮಾಡಿ ಟೋಲ್ ಬಳಿ ಭಾರಿ ಪ್ರಮಾಣದ ಅಕ್ರಮ ಗೋವಾ ಮದ್ಯ ವಶ: ಕಾರವಾರದ ನಾಲ್ವರ ಬಂಧನ

9d5ffd4a-ad25-4447-a8a8-0da10cbc3523

ಪಡುಬಿದ್ರೆ: ಗೋವಾ ರಾಜ್ಯದಿಂದ ಮಂಗಳೂರಿಗೆ ಅಕ್ರಮವಾಗಿ ಕಾರು ಹಾಗೂ ಪಿಕ್‌ಅಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ ₹14.35 ಲಕ್ಷ ಮೌಲ್ಯದ ಮದ್ಯವನ್ನು ಪಡುಬಿದ್ರಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಬಳಿ ಬುಧವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಸಾಗಾಟಕ್ಕೆ ಬಳಸಿದ್ದ ವಾಹನಗಳ ಸಮೇತ ಕಾರವಾರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರವಾರ ತಾಲೂಕಿನ ಕಿನ್ನಾರ ಗ್ರಾಮದ ವಿನಯ್ (47), ನಂದಗಡದ ಗಜಾನನ ಮಹಾಬಲೇಶ್ವರ ನಾಯ್ಕ್ (45), ಅಮದಹಳ್ಳಿಯ ಸುಜಿತ್ ತಾಳೆಕೆರೆ (25) ಹಾಗೂ ಶಿರ್ವಾಡ ಗ್ರಾಮದ ಲಾರೆನ್ಸ್ ಥಾಮಸ್ ಮೆಂಡೋನ್ಸ್ (49) ಬಂಧಿತ ಆರೋಪಿಗಳು. ಬಂಧಿತರ ಪೈಕಿ ವಿನಯ್‌ ಎಂಬಾತನ ಮೇಲೆ ಈಗಾಗಲೇ ಕಾರವಾರ ಜಿಲ್ಲೆಯ ಚಿತ್ತಾಕುಲ, ಕಾರವಾರ ಗ್ರಾಮಾಂತರ ಹಾಗೂ ಅಬಕಾರಿ ಪೊಲೀಸ್ ಠಾಣೆಗಳಲ್ಲಿ ಅಬಕಾರಿ ಕಾಯ್ದೆಯಡಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಆಲಿ ಇವರಿಗೆ ಲಭಿಸಿದ ಖಚಿತ ಮಾಹಿತಿಯನ್ನಾಧರಿಸಿ, ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಬಳಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ತಡೆದು ತಪಾಸಣೆ ನಡೆಸಲಾಯಿತು. ಈ ವೇಳೆ ಮದ್ಯ ಸಾಗಾಟ ಮಾಡುತ್ತಿದ್ದ ಮಹೀಂದ್ರಾ ಪಿಕ್‌ಅಪ್ ವಾಹನ ಹಾಗೂ ಅದಕ್ಕೆ ಎಸ್ಕಾರ್ಟ್ ಮಾಡುತ್ತಿದ್ದ ಮಾರುತಿ ಸ್ವಿಫ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

error: Content is protected !!