ಉಪ್ಪಿನಂಗಡಿ: ಸುಲಿಗೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಉಪ್ಪಿನಂಗಡಿ: ಸುಲಿಗೆ ಪ್ರಕರಣವೊಂದರಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
2006ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿಯಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಅವರ ಮನೆಗೆ ನಾಲ್ವರು ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದಿದ್ದರು. ಈ ವೇಳೆ ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ, ಚಿನ್ನಾಭರಣ ಮತ್ತು ನಗದು ಸೇರಿದಂತೆ ಒಟ್ಟು 2,35,800 ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 187/2006ರಡಿ ಐಪಿಸಿ ಕಲಂ 395 ಮತ್ತು 397ರಂತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ @ ಮಸೂರ ಎಂಬಾತ ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಇದೀಗ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ನಂಜುಂಡಯ್ಯ (HC-325) ಹಾಗೂ ಪೊಲೀಸ್ ಕಾನ್‌ಸ್ಟೇಬಲ್ ಮ್ಯಾಥ್ಯು ವರ್ಗಿಸ್ (PC-1944) ಅವರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




