ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ
ಬೆಂಗಳೂರು : ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ ಮುಂದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಮಾತುಗಳನ್ನಾಡಿರುವುದು ಸರಿಯಲ್ಲ. ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ಶಾಸಕರಾಗಿರುವ ಹರೀಶ್ ಪೂಂಜಾ ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷದ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರಲ್ಲದೆ, ದ್ವೇಷದ ಭಾಷಣ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಚಿವ ಮಧು ಬಂಗಾರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.



