November 18, 2026

ಸುಳ್ಯದಲ್ಲಿ ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ, ಎರಡು ಜಾನುವಾರುಗಳ ರಕ್ಷಣೆ

0
IMG-20261118-WA0029

ಸುಳ್ಯ: ಗಾಂಧಿನಗರ ಶಾಲಾ ಮೈದಾನದ ಬಳಿ ಎರಡು ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 18ರಂದು ಬೆಳಗ್ಗಿನ ಜಾವ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು.

ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು, ಮೈದಾನದಲ್ಲಿದ್ದ ಕಂಬಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ಬಂಧಿತರನ್ನು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್. ಎ. (28) ಮತ್ತು ಸಂಶುದ್ದೀನ್. ಎಸ್.ಎಂ. (25) ಎಂದು ಗುರುತಿಸಲಾಗಿದೆ. ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಕೃತ್ಯಕ್ಕೆ ಬಳಸಲು ಬಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 161/2026ರಂತೆ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಜೊತೆಗೆ 15ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!