ಬಂಟ್ವಾಳ: ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ, ₹54 ಸಾವಿರ ದಂಡ
ಬಂಟ್ವಾಳ: ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶಿಸಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ನೆರೆಮನೆಯ ನಿವಾಸಿ ಅನಿಲ್ ಎಂಬಾತ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂಬ ಆರೋಪದ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಪ್ರಕರಣ ದಾಖಲಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳು ಹಾಗೂ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ್ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಮೋತಿಲಾಲ್ ಚೌಧರಿ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.




