ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಮತ್ತು ಕ್ರೇನ್ ಗೆ ಡಿಕ್ಕಿ ಹೊಡೆದ ಕಾರು: ಮೂವರು ಗಂಭೀರ ಗಾಯ
ಬಂಟ್ವಾಳ : ಬೆಳ್ತಂಗಡಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ದುರಸ್ತಿಗಾಗಿ ನಿಲ್ಲಿಸಿದ್ದ ಕ್ರೇನ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೆಕ್ಯಾನಿಕ್‌ಗಳು ಸೇರಿದಂತೆ ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡು-ಧರ್ಮಸ್ಥಳ ರಸ್ತೆಯ ಕಳಿಮಾರ್ ಸುವರ್ಣ ಇಂಜಿನಿಯರಿಂಗ್ ಶಾಪ್ ಮುಂಭಾಗ ಶನಿವಾರ ಸಂಜೆ ನಡೆದಿದೆ.
ರಸ್ತೆ ಬದಿಯಲ್ಲಿ ಕಾರೊಂದನ್ನು ನಿಲ್ಲಿಸಿ ಅದರ ಚಾಲಕ ತೆರಳಿದ್ದರು. ಸಮೀಪದಲ್ಲೇ ಕ್ರೇನ್‌ವೊಂದನ್ನು ಮೆಕ್ಯಾನಿಕ್ ದುರಸ್ತಿ ಮಾಡುತ್ತಿದ್ದರು ಹಾಗೂ ಅವರೊಂದಿಗೆ ವ್ಯಕ್ತಿಯೋರ್ವರು ಮಾತನಾಡುತ್ತಿದ್ದರು.
ಈ ವೇಳೆ ಪುಂಜಾಲಕಟ್ಟೆ ನಿವಾಸಿ ಯು. ಮಹಮ್ಮದ್ ಅವರು ಮಂಗಳೂರಿನತ್ತ ಸಾಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಕ್ರೇನ್‌ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟು ನಿಂತಿದೆ. ಅದೃಷ್ಟವಶಾತ್ ಆ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಸಂಭವಿಸಬಹುದಾಗಿದ್ದ ಮತ್ತೊಂದು ಅನಾಹುತ ತಪ್ಪಿದಂತಾಗಿದೆ.
ಢಿಕ್ಕಿಯ ತೀವ್ರತೆಗೆ ಕ್ರೇನ್ ದುರಸ್ತಿ ಮಾಡುತ್ತಿದ್ದ ಮಾಧವ ಹಾಗೂ ಪಕ್ಕದಲ್ಲೇ ಇದ್ದ ಪುನೀತ್ ಸಜೀಪ ಅವರು ವಾಹನಗಳ ನಡುವೆ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹರಸಾಹಸಪಟ್ಟು ಇಬ್ಬರನ್ನೂ ಹೊರತೆಗೆದಿದ್ದಾರೆ. ಕಾರು ಚಾಲಕ ಯು. ಮಹಮ್ಮದ್ ಅವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ ಕಲ್ಪಿಸುವಲ್ಲಿ ಸಹಕರಿಸಿದ್ದಾರೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.




