ಮಂಗಳೂರು: ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜಿಂಕೆ ಜಿಮ್ಮಿ ಬಂಧನ
ಮಂಗಳೂರು: ಕಳವು ಪ್ರಕರಣವೊಂದರಲ್ಲಿ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲದ ಬಸ್ತಿ ಪಡ್ಪು ನಿವಾಸಿ ಜಿಂಕೆ ಜಿಮ್ಮಿ ಅಲಿಯಾಸ್ ಮಹಮ್ಮದ್ ಪೈಜಲ್ ಬಂಧಿತ ಆರೋಪಿ.
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 457, 380 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿತ್ತು. ಆದರೆ ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
2026ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ ಎಂದು ಪರಿಗಣಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ನ.24ರಂದು ಆರೋಪಿಯನ್ನು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿದೆ.




