ವಿಟ್ಲ: ಪತ್ನಿಯನ್ನು ಕೊಲೆಗೈದು ಅಸ್ವಾಭಾವಿಕ ಮರಣವೆಂದು ಬಿಂಬಿಸಲು ಯತ್ನಿಸಿದ ಪತಿಗೆ 5 ವರ್ಷ ಜೈಲು ಶಿಕ್ಷೆ
ವಿಟ್ಲ: ಪತ್ನಿಯನ್ನು ಕೊಲೆಗೈದು ಅಸ್ವಾಭಾವಿಕ ಮರಣವೆಂದು ಬಿಂಬಿಸಲು ಯತ್ನಿಸಿದ ಪ್ರಕರಣದಲ್ಲಿ ಪತಿಗೆ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಪುಣಚ ಗ್ರಾಮದ ನಿವಾಸಿ ಸಂಜೀವ ನಾಯ್ಕ ಶಿಕ್ಷೆಗೊಳಗಾದ ಆರೋಪಿ.
2024ರ ಡಿಸೆಂಬರ್ 11ರಂದು ರಾತ್ರಿ ಪುಣಚದಲ್ಲಿ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ ಎಂದು ಆಕೆಯ ಪತಿ ಸಂಜೀವ ನಾಯ್ಕ ನೆರೆಮನೆಯವರಿಗೆ ತಿಳಿಸಿದ್ದ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದರು. ಆದರೆ ಮೃತದೇಹದಲ್ಲಿ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿತ್ತು.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖಾಧಿಕಾರಿಯಾಗಿದ್ದ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಇ. ಮತ್ತು ಸಹಾಯಕ ತನಿಖಾಧಿಕಾರಿ ಕರುಣಾಕರ್ ಅವರು ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ಮೃತ ಮಹಿಳೆಯ ಪತಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 105ರ ಭಾಗ 2ರ ಅಡಿಯಲ್ಲಿ 5 ವರ್ಷ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ. ಕಲಂ 240ರ ಅಡಿಯಲ್ಲಿ 6 ತಿಂಗಳು ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.
ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.




