ವಿಟ್ಲ: ಕಡಂಬು ರಸ್ತೆ ಅಭಿವೃದ್ಧಿಗೆ ₹50 ಲಕ್ಷ ಅನುದಾನ ಮಂಜೂರು: ತೇಪೆ ಕಾಮಗಾರಿಗೆ ವಿರೋಧಿಸಿ ಡಿ.1ರಂದು ಪ್ರತಿಭಟನೆ
ವಿಟ್ಲ: ವಿಟ್ಲ–ಸಾಲೆತ್ತೂರು ರಸ್ತೆಯ ಕಡಂಬು ಹಾಲಿನ ಸೊಸೈಟಿಯಿಂದ ಕಡಂಬು ಜಂಕ್ಷನ್ವರೆಗಿನ ರಸ್ತೆ ಅಭಿವೃದ್ಧಿಗೆ ₹50 ಲಕ್ಷ ಅನುದಾನ ಮಂಜೂರಾಗಿದ್ದು, ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಆಗ್ರಹಿಸಿ ಡಿಸೆಂಬರ್ 1ರಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಕಳೆದ ಒಂದು ವರ್ಷದಿಂದ ಈ ರಸ್ತೆಯು ತೀವ್ರ ಹದಗೆಟ್ಟು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ರಸ್ತೆಯ ದುಸ್ಥಿತಿಯನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಲವು ಬಾರಿ ಲೋಕೋಪಯೋಗಿ ಇಲಾಖೆಯ (PWD) ಇಂಜಿನಿಯರ್ಗಳಿಗೆ ಮನವಿ ಸಲ್ಲಿಸಿ, ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.
ಇತ್ತೀಚೆಗೆ ಬಿ.ಸಿ.ರೋಡಿನಲ್ಲಿ ನಡೆದ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಕೊಳ್ನಾಡು ಗ್ರಾಮದ ಕಾಂಗ್ರೆಸ್ ವಲಯ ಅಧ್ಯಕ್ಷೆ ಪವಿತ್ರ ಪೂಂಜ ಅವರು ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು, ತಕ್ಷಣ ಕ್ರಮ ಕೈಗೊಳ್ಳುವಂತೆ PWD ಇಂಜಿನಿಯರ್ಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ₹50 ಲಕ್ಷ ಅನುದಾನ ಮಂಜೂರಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಆದರೆ, ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಬದಲು ಇಲಾಖೆಯು ಕೇವಲ ತೇಪೆ ಹಾಕುವ ಕಾಮಗಾರಿಗೆ ಮುಂದಾಗಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ತೆರಳಿ ಕಾಮಗಾರಿಯ ಗುಣಮಟ್ಟ ಹಾಗೂ ರಸ್ತೆಯ ಶಾಶ್ವತ ಅಭಿವೃದ್ಧಿಯ ಅಗತ್ಯವನ್ನು ಪ್ರಶ್ನಿಸಿದ್ದಾರೆ.
ಈ ಹಿಂದೆ ರಸ್ತೆ ಸಮಸ್ಯೆಯ ಬಗ್ಗೆ ಗಮನ ಹರಿಸದ ಬಿಜೆಪಿ ಮುಖಂಡರು ಇದೀಗ ರಾಜಕೀಯ ಲಾಭಕ್ಕಾಗಿ ತೇಪೆ ಕಾಮಗಾರಿ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
ರಸ್ತೆಯನ್ನು ಕೇವಲ ತೇಪೆ ಹಾಕಿ ತಾತ್ಕಾಲಿಕವಾಗಿ ಸರಿಪಡಿಸುವ ಬದಲು, ಎರಡೂ ಬದಿಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ನಿರ್ಮಿಸಿ ಗುಣಮಟ್ಟದ ಡಾಮರೀಕರಣ ಮಾಡಬೇಕು ಅಥವಾ ಅಗತ್ಯವಿರುವ ಭಾಗಗಳನ್ನು ಕಾಂಕ್ರೀಟೀಕರಣಗೊಳಿಸಬೇಕು. ಸಾರ್ವಜನಿಕರ ಸಂಚಾರಕ್ಕೆ ದೀರ್ಘಕಾಲ ಬಾಳಿಕೆ ಬರುವ ರೀತಿಯಲ್ಲಿ ರಸ್ತೆ ನಿರ್ಮಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಸಂಬಂಧ ಕಾನೂನುಬದ್ಧವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು, ಈಗಾಗಲೇ PWD ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 1ರಂದು ಮಂಗಳವಾರ ಬೆಳಿಗ್ಗೆ 10.30ಕ್ಕೆ ಕಡಂಬು ಹಾಲಿನ ಸೊಸೈಟಿಯ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ಬಿ. ಸಂದೇಶ್ ಶೆಟ್ಟಿ ಬಿಕ್ನಾಜೆ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಸ್ತೆ ಅಭಿವೃದ್ಧಿಯ ನ್ಯಾಯಯುತ ಹೋರಾಟಕ್ಕೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.




